

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ಹೊರಗಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದ್ದು, ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲ ಹಷ್ಮತ್ ಪಾಷಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದಾಗ, ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಪ್ರಸನ್ನಕುಮಾರ್ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಈ ವೇಳೆ ಎರಡೂ ಕಡೆಯ ವಕೀಲರ ನಡುವೆ ವಾಗ್ವಾದವೂ ನಡೆದಿದೆ.
ಜೈಲಿನಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳಿಂದ ವರದಿ ಪಡೆಯಲು ನ್ಯಾಯಾಧೀಶರು ಸೂಚಿಸಿದ್ದಾರೆ. ಅಲ್ಲದೆ, ಹಿರಿಯ ವೈದ್ಯಾಧಿಕಾರಿಗಳು ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದು, ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.