


ನವದೆಹಲಿ: ಖಾಸಗಿ ದ್ವಿಚಕ್ರ ವಾಹನಗಳನ್ನೂ (Non-Transport Motorcycles) ಬೈಕ್ ಟ್ಯಾಕ್ಸಿ ಸೇವೆಗೆ ಬಳಸಲು ಅನುಮತಿ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಎಲ್ಲ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ‘ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿ-2025’ರ ಅಡಿಯಲ್ಲಿ ಈ ಅವಕಾಶ ಕಲ್ಪಿಸುವಂತೆ ಅವರು ರಾಜ್ಯಗಳಿಗೆ ಸೂಚಿಸಿದ್ದಾರೆ.
ದೆಹಲಿಯಲ್ಲಿ ಆಯೋಜಿಸಲಾಗಿದ್ದ ‘ರೈಡ್: ಅಗ್ರಿಗೇಟರ್ ಮತ್ತು ಡೆಲಿವರಿ ಸೇವೆಗಳ ಪ್ರದರ್ಶನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕ್ರಮದಿಂದ ದೇಶದಲ್ಲಿ 15ರಿಂದ 20 ಕೋಟಿ ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಇದರಿಂದ ಆರ್ಥಿಕ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಎಲ್ಲ ರಾಜ್ಯಗಳ ಸಾರಿಗೆ ಆಯುಕ್ತರ ಸಭೆ ಕರೆದು, ಅಗ್ರಿಗೇಟರ್ ಆ್ಯಪ್‌ಗಳ ಮೂಲಕ ಖಾಸಗಿ ಬೈಕ್‌ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತು ಎಲ್ಲ ರಾಜ್ಯ ಸರ್ಕಾರಗಳಿಗೂ ಅಧಿಕೃತ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.
ಬೈಕ್ ಟ್ಯಾಕ್ಸಿ ಕಂಪನಿಗಳಿಗೆ ನಿರಾಳತೆ
ಕೇಂದ್ರ ಸರ್ಕಾರದ ‘ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿ-2025’ ಹಂಚಿಕೆಯ ಸಾರಿಗೆ ಕ್ಷೇತ್ರಕ್ಕೆ ಕಾನೂನು ಸ್ಪಷ್ಟತೆ ಒದಗಿಸಿದೆ. ಈ ಮಾರ್ಗಸೂಚಿಯ ಪ್ರಕಾರ, ರಾಜ್ಯ ಸರ್ಕಾರಗಳು ವೈಟ್ ಬೋರ್ಡ್ ಹೊಂದಿರುವ ಖಾಸಗಿ ಬೈಕ್‌ಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಬಹುದಾಗಿದೆ.
ಇದುವರೆಗೆ ಕಾನೂನಿನ ಅಸ್ಪಷ್ಟತೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದ ರ‍್ಯಾಪಿಡೋ ಮತ್ತು ಉಬರ್‌ನಂತಹ ಬೈಕ್ ಟ್ಯಾಕ್ಸಿ ಕಂಪನಿಗಳಿಗೆ ಈ ಮಾರ್ಗಸೂಚಿ ನಿರಾಳತೆ ನೀಡುವ ನಿರೀಕ್ಷೆಯಿದೆ. ಬೈಕ್ ಟ್ಯಾಕ್ಸಿ ಸೇವೆಯ ನಿಷೇಧ ವಿಚಾರವಾಗಿ ಸಂಘರ್ಷ ಮತ್ತು ಪ್ರತಿಭಟನೆಗಳಿಗೆ ಸಾಕ್ಷಿಯಾಗಿದ್ದ ಕರ್ನಾಟಕದಲ್ಲಿಯೂ ಈ ಮಾರ್ಗಸೂಚಿ ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಧ್ಯತೆಯಿದೆ.
ಕಾನೂನಿನಲ್ಲಿ ಏನಿದೆ?
ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಉಪವಿಭಾಗ (3)ರ ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ನೀಡಲಾಗಿರುವ ಅಧಿಕಾರವನ್ನು ಬಳಸಿಕೊಂಡು, ಪ್ರಯಾಣಿಕರ ಸಾಗಣೆಗೆ ಖಾಸಗಿ ಬೈಕ್‌ಗಳನ್ನು ಬಳಸಲು ಅನುಮತಿ ನೀಡಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಬೈಕ್ ಶೇರಿಂಗ್, ಎಲೆಕ್ಟ್ರಿಕ್ ವಾಹನಗಳು (EV) ಮತ್ತು ಆಟೋ ರಿಕ್ಷಾ ಸೇವೆಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2020ರ ಮಾರ್ಗಸೂಚಿಯನ್ನು ಪರಿಷ್ಕರಿಸಿ 2025ರ ಹೊಸ ಮಾರ್ಗಸೂಚಿ ಜಾರಿಗೆ ತರಲಾಗಿದೆ. ಪ್ರಯಾಣಿಕರ ಸುರಕ್ಷತೆ, ಚಾಲಕರ ಕಲ್ಯಾಣ ಹಾಗೂ ಸಾರಿಗೆ ಸೇವೆಗಳ ಸರಳ ನಿಯಂತ್ರಣ ವ್ಯವಸ್ಥೆಯನ್ನು ಖಚಿತಪಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.