

ಮಂಗಳೂರು: ಆಸ್ಪತ್ರೆಗಳು, ಕಾಲೇಜು ಕ್ಯಾಂಟೀನ್‌ಗಳು ಹಾಗೂ ಬೇಕರಿಗಳಲ್ಲಿ ಸಾರ್ವಜನಿಕರಿಗೆ ಪೂರೈಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಮುಕ್ಕ ಹಾಗೂ ಮುಲ್ಕಿ ವ್ಯಾಪ್ತಿಯಲ್ಲಿ ದಿಢೀರ್ ಪರಿಶೀಲನಾ ಕಾರ್ಯಾಚರಣೆ ನಡೆಸಿದೆ.
ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದ ತಂಡ ಈ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ವಿವಿಧ ಆಹಾರ ತಯಾರಿಕಾ ಘಟಕಗಳಲ್ಲಿ ಪರಿಶೀಲನೆ ನಡೆಸಿದೆ.
ಶ್ರೀನಿವಾಸ ಮೆಡಿಕಲ್ ಕಾಲೇಜು ಕ್ಯಾಂಟೀನ್, ಮೆಸ್ ಪರಿಶೀಲನೆ
ಸುರತ್ಕಲ್ ಸಮೀಪದ ಮುಕ್ಕದಲ್ಲಿರುವ ಶ್ರೀನಿವಾಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಹಾಸ್ಟೆಲ್ ಮೆಸ್‌ಗಳ ಅಡುಗೆ ಕೋಣೆಗಳಿಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಆಹಾರ, ಕುಡಿಯುವ ನೀರಿನ ಮಾದರಿ ಸಂಗ್ರಹ
ಅಡುಗೆ ತಯಾರಿಕೆಗೆ ಬಳಸುವ ಕಚ್ಚಾ ಆಹಾರ ಸಾಮಗ್ರಿಗಳು ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಗುಣಮಟ್ಟ ಪರೀಕ್ಷೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ರೋಗಿಗಳಿಗೆ ಗುಣಮಟ್ಟದ ಆಹಾರ ನೀಡಲು ಸೂಚನೆ
ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಶುಚಿ, ರುಚಿಕರ ಹಾಗೂ ಪೌಷ್ಟಿಕಾಂಶಯುಕ್ತ ಸುರಕ್ಷಿತ ಆಹಾರವನ್ನು ತಯಾರಿಸಿ ಪೂರೈಸುವಂತೆ ಆಡಳಿತ ಮಂಡಳಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಡುಗೆ ತಯಾರಿಸುವ ಹಾಗೂ ಆಹಾರ ಪೂರೈಸುವ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಯಮಿತವಾಗಿ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಆರೋಗ್ಯ ದೃಢೀಕರಣ ಪತ್ರಗಳನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ.
ಮುಲ್ಕಿ ಬೇಕರಿಗಳಲ್ಲೂ ಪರಿಶೀಲನೆ: ಕೃತಕ ಬಣ್ಣ ಬಳಕೆಗೆ ಎಚ್ಚರಿಕೆ
ಹಬ್ಬದ ಸಂದರ್ಭದಲ್ಲಿ ಸಿಹಿತಿಂಡಿಗಳ ಮಾರಾಟ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುಲ್ಕಿ ಕಾರ್ನಾಡ್ ವ್ಯಾಪ್ತಿಯ ಬೇಕರಿಗಳಲ್ಲೂ ಆಹಾರ ಸುರಕ್ಷತಾ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿದರು.
ಸಿಹಿತಿಂಡಿಗಳ ತಯಾರಿಕೆಯಲ್ಲಿ ಅಪಾಯಕಾರಿ ರಾಸಾಯನಿಕಯುಕ್ತ ಕೃತಕ ಬಣ್ಣಗಳನ್ನು ಬಳಸಬಾರದು ಎಂದು ಬೇಕರಿ ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು.
ಸಂಶಯಾಸ್ಪದ ಸಿಹಿತಿಂಡಿಗಳು ವಶಕ್ಕೆ
ಕೃತಕ ಬಣ್ಣಗಳನ್ನು ಬಳಸಿ ತಯಾರಿಸಿರುವ ಶಂಕೆ ವ್ಯಕ್ತವಾದ ಸಿಹಿತಿಂಡಿಗಳನ್ನು ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದು, ಸೀಲ್ ಮಾಡಿ ಪರೀಕ್ಷೆಗಾಗಿ ಆಹಾರ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.
ಇದಲ್ಲದೆ, ಬೇಕರಿ ಹಾಗೂ ತಿಂಡಿ ತಯಾರಿಕಾ ಘಟಕಗಳಲ್ಲಿ ಸಮರ್ಪಕ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಬೇಕರಿಗಳಿಗೆ ಇಲಾಖೆಯ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.