


ಕುಂದಾಪುರ: ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 7 ಪವನ್ ತೂಕದ ಚಿನ್ನದ ಕರಿಮಣಿ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ನ.24ರಂದು ಗೀತಾ ಅವರು ತಮ್ಮ ಪತಿಯೊಂದಿಗೆ ಔಷಧ ತರಲು ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಕೋಟೇಶ್ವರದಲ್ಲಿ ಕೊಡಿ ಹಬ್ಬ ನಡೆಯುತ್ತಿದ್ದ ಕಾರಣ ಕೋಟೇಶ್ವರ ಬೈಪಾಸ್‌ನಲ್ಲಿ ಬಸ್‌ನಿಂದ ಇಳಿದು ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ಬೆಳಗ್ಗೆ 11.30ರ ಸುಮಾರಿಗೆ ದೇವರ ದರ್ಶನ ಪಡೆದು, ಮಧ್ಯಾಹ್ನ 12.30ರ ವೇಳೆಗೆ ದೇವಸ್ಥಾನದ ಹೊರಭಾಗದಲ್ಲಿ ಊಟದ ಸರತಿ ಸಾಲಿನಲ್ಲಿ ನಿಂತಿದ್ದಾಗ ಜನಸಂದಣಿಯ ನಡುವೆ ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿದ್ದರು. ಕಳವಾದ ಸರದ ಅಂದಾಜು ಮೌಲ್ಯ 6 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಭಾಗ್ಯ (39), ಅಶ್ವಿನಿ ಎಲ್. ಅಲಿಯಾಸ್ ಗಾಯತ್ರಿ (25), ಕಾಮಾಚಿ (50), ಆದಮ್ಮಾಳ್ ಅಲಿಯಾಸ್ ಆದ್ಯಾಮ್ಮ (49) ಹಾಗೂ ಎಸ್. ನಾಗರಾಜ (48) ಎಂಬ ಐವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಕಳವು ಮಾಡಲಾಗಿದ್ದ 6 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಕೆಎ 01 ಎಂಆರ್ 7991 ನೋಂದಣಿ ಸಂಖ್ಯೆಯ ಸಿಲ್ವರ್ ಬಣ್ಣದ ಮಹೀಂದ್ರಾ ಟಿಯುವಿ 300 ಕಾರು ಹಾಗೂ 7 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕ ಜಯರಾಮ್ ಡಿ. ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಠಾಣೆಯ ಪಿಎಸ್‌ಐಗಳಾದ ನಂಜಾನಾಯ್ಕ್ ಎನ್. ಮತ್ತು ಪುಷ್ಪ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಆರ್‌ಡಿಸಿ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.