


ಉಡುಪಿ: ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ತಾಲೂಕಿನ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 3ರಿಂದ ನವೆಂಬರ್ 7ರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಈ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಧರಣಿ, ಪ್ರತಿಭಟನೆ, ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಮುಷ್ಕರಗಳನ್ನು ನಡೆಸುವಂತಿಲ್ಲ. ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳಿಗೆ ವಿನಾಯಿತಿ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನೂ ನಿರ್ಬಂಧಿಸಲಾಗಿದೆ.
ಶಸ್ತ್ರಾಸ್ತ್ರ, ಬಡಿಗೆ, ಚೂರಿ, ಲಾಠಿ, ದೊಣ್ಣೆ ಸೇರಿದಂತೆ ಅಪಾಯ ಉಂಟುಮಾಡುವ ಯಾವುದೇ ವಸ್ತುಗಳನ್ನು ಕೊಂಡೊಯ್ಯುವುದು ಮತ್ತು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಕಲ್ಲು, ಸ್ಫೋಟಕ, ದಾಹಕ ವಸ್ತುಗಳು ಹಾಗೂ ಎಸೆಯುವ ವಸ್ತುಗಳನ್ನು ಸಂಗ್ರಹಿಸುವುದಕ್ಕೂ ಅವಕಾಶವಿಲ್ಲ.
ಇದಲ್ಲದೆ, ಧ್ವನಿವರ್ಧಕ ಬಳಕೆ, ಪ್ರಚೋದನಕಾರಿ ಭಾಷಣ, ಹಾಡು, ಘೋಷಣೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ. ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳು, ಚಿಹ್ನೆ ಮತ್ತು ಪ್ರತಿಕೃತಿಗಳನ್ನು ಪ್ರದರ್ಶಿಸುವುದನ್ನೂ ನಿರ್ಬಂಧಿಸಲಾಗಿದೆ.
ನಿಷೇಧಾಜ್ಞೆ ಉಲ್ಲಂಘಿಸಿ ಮಾರಕಾಸ್ತ್ರ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದಿರುವುದು ಕಂಡುಬಂದರೆ, ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.