ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದು, ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ SH1 ಸ್ಪರ್ಧೆಯ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಆ.31 ರಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.
ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್ನಲ್ಲಿದ್ದರು. ಆದರೆ ಕೊನೆಯ ಎರಡು ಶಾಟ್ಗಳಲ್ಲಿ ಲಯ ಕಳೆದುಕೊಂಡ ಅವರು ಒಟ್ಟು 211.1 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು. ಮೊನ್ನೆ ನಡೆದ ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದ್ದರು.
ಇದಕ್ಕೂ ಮೊದಲು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನ, ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ ಈವೆಂಟ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದರೆ, ಇದೇ ಈವೆಂಟ್ನಲ್ಲಿ ಮತ್ತೊರ್ವ ಭಾರತೀಯ ಸ್ಪರ್ಧಿ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದಿದ್ದರು. ಆ ನಂತರ, ಪುರುಷರ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಮನೀಶ್ ನರ್ವಾಲ್ ಬೆಳ್ಳಿ ಪದಕ ಗೆದ್ದಿದ್ದರು. ಉಳಿದಂತೆ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.