


ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಕೊನೆಗೂ ಸ್ಪಂದಿಸಿರುವ ಮಂಗಳೂರಿನ ಬೆಂದೂರ್‌ವೆಲ್‌ನ ಸೈಂಟ್ ಆಗ್ನೆಸ್ ಕಾಲೇಜು, ಅಕ್ಟೋಬರ್ 19 ಮತ್ತು 22ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.
ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. ಮಂಗಳೂರು ದಸರಾ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೂಡ ಬೆಂಬಲ ನೀಡಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪರೀಕ್ಷಾ ಅಧಿಕಾರಿ ಶುಭಾರೇಖಾ, “ಸೈಂಟ್ ಆಗ್ನೆಸ್ ಕಾಲೇಜಿಗೆ ನೂರು ವರ್ಷಗಳ ಇತಿಹಾಸವಿದೆ. ಪ್ರತಿವರ್ಷ ಅಕ್ಟೋಬರ್‌ನಲ್ಲೇ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಬಾರಿಯೂ ಒಂದು ತಿಂಗಳ ಮುಂಚಿತವಾಗಿಯೇ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಇಂದು ವಿದ್ಯಾರ್ಥಿಗಳು ಏಕಾಏಕಿ ಪರೀಕ್ಷೆಗಳಿಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ,” ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಒತ್ತಾಯದ ಹಿನ್ನೆಲೆಯಲ್ಲಿ ಅಕ್ಟೋಬರ್ 19 ಮತ್ತು 22ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮುಂದಿನ ಉದ್ಯೋಗಾವಕಾಶಗಳಿಗಾಗಿ ಸಿದ್ಧತೆ ನಡೆಸುತ್ತಿದ್ದು, ಪರೀಕ್ಷೆಗಳನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸುವ ಉದ್ದೇಶವಿತ್ತು ಎಂದು ಕಾಲೇಜಿನ ಪರೀಕ್ಷಾ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.