

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಸುಗಮವಾಗಿ ಕಾರ್ಯನಿರ್ವಹಿಸಬಲ್ಲದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಕುರಿತು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದ ರಾಜ್ಯದ ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಹೇಳಿದ ಖಾದರ್, “10 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಇದರಿಂದ ಆರೋಗ್ಯ ಇಲಾಖೆ ಯಾವುದೇ ಸಮಸ್ಯೆಗೆ ಸಿಲುಕಿದೆಯೇ? ಹಳ್ಳಿಗಳಲ್ಲಿ ಏನಾದರೂ ತೊಂದರೆಯಾಗಿದೆಯೇ? ಇಲ್ಲ. ಹೆರಿಗೆ ಸೇರಿದಂತೆ ಎಲ್ಲ ಆರೋಗ್ಯ ಸೇವೆಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.
“ಆಶಾ ಕಾರ್ಯಕರ್ತೆಯರು ಇದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ, ಇಲ್ಲದಿದ್ದರೂ ನಡೆಯುತ್ತದೆ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೆ ವೈದ್ಯರು ಮತ್ತು ನರ್ಸ್‌ಗಳು ಇಲ್ಲವೇ?” ಎಂದು ಸಚಿವರು ಪ್ರಶ್ನಿಸಿದ್ದಾರೆ.
ತಮಿಳುನಾಡಿನಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಿದೆ ಎಂದು ಉಲ್ಲೇಖಿಸಿದ ಖಾದರ್, ಅಲ್ಲಿನ ಆರೋಗ್ಯ ವ್ಯವಸ್ಥೆಯನ್ನು ಉದಾಹರಣೆಯಾಗಿ ನೀಡಿದ್ದಾರೆ.
“ನರ್ಸ್‌ಗಳಿಗೆ 10 ಸಾವಿರ ರೂ., ಶಿಕ್ಷಕರಿಗೆ 12 ಸಾವಿರ ರೂ. ಹಾಗೂ ಆರೋಗ್ಯ ಸಹಾಯಕರಿಗೆ 4,500 ರೂ. ಸಂಬಳ ನೀಡಲಾಗುತ್ತಿದೆ. ಹಾಗಾದರೆ ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ನೀಡಬೇಕೇ?” ಎಂದು ಸಚಿವರು ಪ್ರಶ್ನಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.