ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ.
ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉಡುಪಿ ನ್ಯಾಯಾ ಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರೆಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಿದ್ದಾರೆ. ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ ವರ್ಗಾಯಿಸಲಾಗಿದೆ. ಇದೀಗ ಆರೋಪಿ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಆದರೂ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸುವಾಗ ಜೀವ ಬೆದರಿಕೆ ಎದುರಾ ಗುತ್ತದೆ ಎಂಬ ತಪ್ಪು ಗ್ರಹಿಕೆಯನ್ನು ಮಾಡಲಾಗಿದೆ. ಅದಕ್ಕಾಗಿ ನ್ಯಾಯಾಲಯದ ವಿಚಾರಣೆಯನ್ನು ತಡೆಹಿಡಿಯಲು ಆಗುವುದಿಲ್ಲ. ಆರೋಪಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಕೂಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಬಹುದು. ಹೈಕೋರ್ಟ್ ತಡೆಯಾಜ್ಞೆಯಿಂದ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.