


ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಅಂತಹ ವಾಹನಗಳಿಗೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಡಿಸೆಂಬರ್ 18ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಹಿಂದೆ ಈ ಬಗ್ಗೆ ಆರ್.ಟಿ.ಓ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಕಂಡುಬoದಿಲ್ಲ. ಪ್ರತೀ ಮಾಹೆಯೂ ನಿಯಮವನ್ನು ಉಲ್ಲಂಘಿಸಿದoತಹ ಬಸ್‌ಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದ ಅವರು, ಪ್ರತಿಯೊಂದು ಬಸ್‌ಗಳಿಗೂ ಸಹ ಡೋರ್‌ಗಳನ್ನು ಅಳವಡಿಸಬೇಕು. ಅವರಿಗೆ ಡೋರ್ ಅಳವಡಿಸಲು ಒಂದು ನಿಗಧಿತ ಸಮಯಾವಕಾಶ ಕೊಟ್ಟು, ಅಳವಡಿಸದೇ ಇರುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆರ್.ಟಿ.ಓ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯವಿರುವ ಸಿದ್ಧ ಕಾಂಕ್ರೀಟ್ ಮಿಶ್ರಣವನ್ನು ಸಾಗಿಸುವ ವಾಹನಗಳು ಓವರ್ ಲೋಡ್ ನಿಂದಾಗಿ ಕಾಂಕ್ರೀಟ್ ಮಿಶ್ರಣವು ರಸ್ತೆಯ ಮೇಲೆ ಎಲ್ಲೆಂದರಲ್ಲಿ ಬಿದ್ದು, ಉಬ್ಬುಗಳು ಉಂಟಾಗಿ ದ್ವಿಚಕ್ರ ವಾಹನಗಳು ಸೇರಿದಂತೆ ಮತ್ತಿತರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುವುದರ ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ. ಈ ಸಂಬoಧ ದೂರುಗಳು ಸಹ ಕೇಳಿ ಬರುತ್ತಿವೆ. ಕೂಡಲೇ ಆರ್.ಟಿ.ಓ ಅಧಿಕಾರಿಗಳು ಕ್ರಮವಹಿಸಿ, ಅಂತಹ ವಾಹನಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಈಗಾಗಲೇ ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲಾಕ್ ಸ್ಪಾಟ್‌ಗಳ ಪ್ರದೇಶಗಳನ್ನು ಗುರುತಿಸಿದ್ದು, ಈ ಸ್ಥಳಗಳನ್ನು ಪರಿಶೀಲಿಸಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೂಡಲೇ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಗಳು ಸಂಬoಧಿಸಿದ ಅಭಿಯಂತರರುಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸರಕಾರ ಸುಗಮ ಸಂಚಾರಕ್ಕಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಿಸಿದ್ದು, ಇವುಗಳನ್ನು ಚಾಚೂ ತಪ್ಪದೇ ಪಾಲಿಸಿದ್ದಲ್ಲಿ ಅಪಘಾತಗಳಿಂದ ಮುಕ್ತಿ ಹೊಂದಲು ಸಾಧ್ಯ. ಇದಕ್ಕೆ ಒತ್ತು ನೀಡಿ, ಜಾಗರೂಕರಾಗಿ ವಾಹನಗಳನ್ನು ಚಾಲನೆ ಮಾಡಬೇಕು ಎಂದರು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಜಾಗಗಳನ್ನು ಗುರುತಿಸಿ, ಸಾರ್ವಜನಿಕ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕು, ರಸ್ತೆ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರವುಗೊಳಿಸಬೇಕು. ಸಾಧ್ಯವಾದಲ್ಲಿ ವೆಂಡಿoಗ್ ಝೋನ್ ಗೆ ಸ್ಥಳ ಗುರುತಿಸಿ, ಅಲ್ಲಿ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಪೌರಾಯುಕ್ತರಿಗೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಆಟೋ ರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೋ ರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ಬಗ್ಗೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದ ಅವರು, ಮಣಿಪಾಲ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಆಧಾರಿತ ಟ್ಯಾಕ್ಸಿ ಸೇವೆಗೆ ಸಂಬAಧ ಸಾರ್ವಜನಿಕ ಸಭೆಯನ್ನು ಪರ-ವಿರೋಧ ಪ್ರತ್ಯೇಕವಾಗಿ ಕರೆದು ಆ ಸಂಬoಧ ವರದಿ ನೀಡಬೇಕೆಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.